ತುಮಕೂರು: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಫೆ.16 ರಂದು ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಡಿಟೋರಿಯಂನಲ್ಲಿ ಕಾರ್ಮಿಕರ ಜನಜಾಗೃತಿ ಹಾಗೂ ಜಿಲ್ಲಾ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಶಾಸಕ ಬಿ.ಸುರೇಶ್ ಗೌಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ., ಸಂಘದ ರಾಜ್ಯಾಧ್ಯಕ್ಷ ವಿ.ದೇವರಾಜು, ಕಾರ್ಯಾಧ್ಯಕ್ಷ ಆರ್. ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸ್ಪೂರ್ತಿ ಡೆವಲಪರ್ಸ್ ಎಂ.ಡಿ. ಎಸ್.ಪಿ.ಚಿದಾನಂದ್, ಮಾರುತಿ ಮೆಡಿಕಲ್ಸ್ ನ ಮಹೆಂದ್ರ ಮುನೋಥ್ ಜೈನ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರ ಕ್ಷೇತ್ರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮ ಉದ್ಘಾಟಿಸುವರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಲಿ ಮತ್ತು ಮಾಜಿ ಶಾಸಕರು, ನಿವೃತ್ತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಸಿದ್ದಗಂಗಾ ಮಠದ ಆವರಣದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ಥಳಿಯನ್ನು ರಥದಲ್ಲಿ ಇರಿಸಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ರಥವನ್ನು ಉದ್ಘಾಟಿಸುವರು. ನಂತರ ರಥವು ಕಲಾ ತಂಡಗಳ ಮೆರವಣಿಗೆಯೊಂದಿಗೆ ಟೌಲ್ಹಾಲ್ ಮುಖೇನ ಎಂಪ್ರೆಸ್ ಆಡಿಟೋರಿಯಂ ತಲುಪಲಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಬಿ. ದೇವರಾಜ್ ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಆರ್. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮಾವೇಶಕ್ಕೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.