ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ ನೀಡಿ, ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.
ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮೂಲ ಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಅಲ್ಲದೆ, ಮಕ್ಕಳಿಗೆ ನೀಡಲಾಗುತ್ತಿರುವ ವ್ಯಾಕ್ಸಿನೇಷನ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅವರು, ಅಂಗನವಾಡಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳ್ಳಂಬೆಳ್ಳ ಕೆನರಾ ಬ್ಯಾಂಕ್‌ನ ಕೆಸಿಸಿ ಸಾಲ ಪದ್ಧತಿ ಯೋಜನೆಯ ಕುರಿತು ರೈತರಿಗೆ ಸಾಲ ನೀಡಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ಪ್ರಾಥಮಿಕ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ರೈತರಿಗೆ ಕೃಷಿ ಇಲಾಖೆಯಿಂದ ವಿತರಿಸುವ ಪರಿಕರ ಹಾಗೂ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವುದಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಕಳ್ಳಂಬೆಳ್ಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಿಡಿಒ ಕಚೇರಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳ ಮಾಹಿತಿಯನ್ನು ಪಡೆದರು.

ನಂತರ ಶಿರಾ ಪಟ್ಟಣದಲ್ಲಿ ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಶಿರಾ ಪುರಸಭೆಗೆ ಭೇಟಿ ನೀಡಿ ಪಿಎಂ ಸ್ವಾನಿಧಿ ಯೋಜನೆಯ ಫಲಾನುಭವಿಗಳ ಮಾಹಿತಿ ಪಡೆದು ಪರಿಶೀಲಿಸಿದರು.
ಬಳಿಕ ಬಾಳೇನಹಳ್ಳಿ ಗ್ರಾಮದ ರಾಮಚಂದ್ರಪ್ಪ ಅವರ ಜಮೀನಿಗೆ ಭೇಟಿ ನೀಡಿ ಸಮಗ್ರ ಕೃಷಿ ಮಾಡುತ್ತಿರುವುದನ್ನು ವೀಕ್ಷಿಸಿ, ರೈತರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು, ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್, ಸಹಾಯಕ ಕೃಷಿ ನಿರ್ದೇಶಕ ನಾಗರಾಜು, ಮತ್ತಿತರ ಅಧಿಕಾರಿಗಳು ಇದ್ದರು.