ತುಮಕೂರು-ಕೇಂದ್ರ-ಮತ್ತು-ರಾಜ್ಯ-ಸರ್ಕಾರಗಳು-ಒಗ್ಗೂಡಿ-ಕೆಲಸ- ಮಾಡಿದಾಗ-ಅಭಿವೃದ್ಧಿ-ಸಾಧ್ಯ-ಸಚಿವ-ವಿ.ಸೋಮಣ್ಣ

ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ದಿಶಾ ಸಮಿತಿ ಅಧ್ಯಕ್ಷ ವಿ. ಸೋಮಣ್ಣ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ದಿಶಾ ಸಮಿತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಯ ಪ್ರಗತಿ ಪರಿಶೀಲಿಸುತ್ತಾ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಜೆಜೆಎಂ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಳಪೆ ಗುಣಮಟ್ಟದ ಕಾಮಗಾರಿಗಳು ಕಂಡು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಕೇಂದ್ರದ ಜೆಜೆಎಂ ಯೋಜನೆಯು ಶಾಶ್ವತ ಕುಡಿಯುವ ನೀರಿನ ಯೋಜನೆಯಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಮಾರ್ಚ್ ಅಂತ್ಯಕ್ಕೆ 4 ಬ್ಯಾಚುಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈವರೆಗೂ 3699 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆಯಾಗಿದ್ದು, ಈ ಪೈಕಿ 3256 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಈವರೆಗೂ 1449 ಕಾಮಗಾರಿಗಳು ಪೂರ್ಣಗೊಂಡಿದ್ದು, 1372 ಕಾಮಗಾರಿಗಳು ಪ್ರಗತಿಯಲ್ಲಿವೆ. ಇದಕ್ಕಾಗಿ 585 ಕೋಟಿ ರೂ.ಗಳ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ತುಮಕೂರು-ದಾವಣಗೆರೆ ರೈಲ್ವೆ ಮಾರ್ಗದ ಪ್ರಗತಿ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದಾಗ ಈ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಶೇ.9೦ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, 59 ಎಕರೆ ಮಾತ್ರ ಭೂಸ್ವಾಧೀನವಾಗಬೇಕಿದೆ. ಮುಂದಿನ ಒಂದೂವರೆ ವರ್ಷದೊಳಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲಾ ರೈಲ್ವೆ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದು ಸಂಸದ ಉತ್ತರಿಸಿದರು.

ಗ್ರಾಮಾಂತರ ಶಾಸಕ ಸುರೇಶ್ ಗೌಡ ಮಾತನಾಡಿ, ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ 11 ಘಟಕಗಳಿದ್ದು, ಈ ಯೋಜನೆಯಿಂದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಜನರಿಗೆ ಕುಡಿಯುವ ನೀರು ಸರಬರಾಜು ಮಾಡುವ ಇಚ್ಛಾಶಕ್ತಿ ಅಧಿಕಾರಿಗಳಿಗಿಲ್ಲವೆಂದು ಸಭೆಗೆ ದೂರು ನೀಡಿದಾಗ, ಪ್ರತಿಕ್ರಿಯಿಸಿದ ಸೋಮಣ್ಣ ಕೂಡಲೇ ದುರಸ್ತಿಯಲ್ಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಘಟಕಗಳನ್ನು ಸುಸ್ಥಿತಿಗೆ ತರಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್‌ಗೆ ಸೂಚನೆ ನೀಡಿದರು.

ಸಂಸದ ಸೋಮಣ್ಣ ಮುಂದುವರೆದು ಮಾತನಾಡುತ್ತಾ, ಜಿಲ್ಲೆಯಲ್ಲಿ ಅರಣ್ಯ ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಅರಣ್ಯ ಒತ್ತುವರಿಯಿಂದ ಸಾಮಾಜಿಕ ಅರಣ್ಯ ನಾಶವಾಗುತ್ತಿದೆ. ಒತ್ತುವರಿಗೆ ಸಂಬAಧಿಸಿದAತೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ವರ್ಷಗಳಿಂದ ರಸ್ತೆಗಳು ಹದಗೆಟ್ಟ ಸ್ಥಿತಿಯಲ್ಲಿವೆ. ರಸ್ತೆ ಸಂಪರ್ಕವಿಲ್ಲದಿರುವ ಗ್ರಾಮಗಳ ಮಾಹಿತಿ ಪಡೆದು ಸದರಿ ಗ್ರಾಮಗಳಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಮೀನು ಸಾಕಣೆ ಕೆರೆಗಳ ಹರಾಜು ಹಕ್ಕನ್ನು ಆಯಾ ಗ್ರಾಮಪಂಚಾಯತಿಗಳಿಗೆ ನೀಡಬೇಕು. ಇದರಿಂದ ಪಂಚಾಯತಿಗೆ ಆದಾಯ ಬರಲಿದೆ ಎಂದು ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಶಿವಶಂಕರ್ ಅವರಿಗೆ ಸೂಚನೆ ನೀಡಿದರು.

ಬಹುತೇಕ ಗ್ರಾಮೀಣ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿ ಉತ್ತಮ ವಾಗಿಲ್ಲದಿರುವುದನ್ನು ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿದ ಸಂದರ್ಭದಲ್ಲಿ ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಮಧುಗಿರಿ ಮತ್ತು ತುಮಕೂರು ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಿಗೆ ಕಾರ್ಯನಿರ್ವಹಿಸಬೇಕೆಂದು ಸಚಿವರು ಸೂಚಿಸಿದರು.

ಉಳಿದಂತೆ ಸಭೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ, ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರ, ವಿಶ್ವಕರ್ಮ ಸಮುದಾಯಕ್ಕೆ ಒದಗಿಸಲಾಗುತ್ತಿರುವ ತರಬೇತಿ ಹಾಗೂ ಶಿಷ್ಯವೇತನ ಸೇರಿದಂತೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಇಲಾಖಾವಾರು ಪರಿಶೀಲಿಸಿದರು.ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಮಾತನಾಡಿ, ಬಿದರೆಹಳ್ಳ ಕಾವಲ್‌ನಲ್ಲಿ ಹೆಲಿಕಾಪ್ಟರ್ ಘಟಕ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವುದು ಬೇಸರದ ಸಂಗತಿ. ಈ ಕುಟುಂಬಗಳಿಗೆ ಆದ್ಯತೆ ನೀಡಿ ಉದ್ಯೋಗ ನೀಡಬೇಕು ಎಂದು ಸಭೆಗೆ ಮನವಿ ಮಾಡಿದರು.

ಸಭೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ಡಾ|| ಮಂಜುನಾಥ್, ಶಾಸಕರಾದ ಜ್ಯೋತಿ ಗಣೇಶ್, ಎಂ.ಟಿ.ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪವಿಭಾಗಾಧಿಕಾರಿಗಳಾದ ಗೌರವ್‌ಕುಮಾರ್ ಶೆಟ್ಟಿ, ಗೋಟೂರು ಶಿವಪ್ಪ, ಸಪ್ತಶ್ರೀ, ವಿವಿಧ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

× How can I help you?