ಕೆ.ಆರ್.ಪೇಟೆ,ಜೂ.09: ತಾಲ್ಲೂಕಿನ ಅಘಲಯ ಗ್ರಾಮದ ಯುವ ಮುಖಂಡರು ಹಾಗೂ ಅಘಲಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಎ.ವೈ.ವಿಜಯಕುಮಾರ್ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದ್ದಾರೆ.
ನೂತನ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎ.ವೈ.ವಿಜಯ್ ಕುಮಾರ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಆದೇಶದ ಪತ್ರವನ್ನು ನೀಡಿ ಅಭಿನಂದಿಸಿ ಮಾತನಾಡಿ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿರುವ ಎ.ವೈ.ವಿಜಯಕುಮಾರ್ ಅವರ ಕಾರ್ಯದಕ್ಷತೆಯನ್ನು ಗುರುತಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.

ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಕೆ.ಆರ್.ಪೇಟೆ ವಿಧಾಸಭಾ ಕ್ಷೇತ್ರ ಸೇರಿದಂತೆ ಜಿಲ್ಲಾಧ್ಯಂತ ತಮ್ಮದೇ ಆದ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಬೂತ್ ಮಟ್ಟದಿಂದ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭೆ, ಲೋಕಸಭೆ ಚುನಾವಣೆಗಳು ಸೇರಿದಂತೆ ಸ್ಥಳೀಯ ಸಹಕಾರ ಸಂಸ್ಥೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಬಹುಮತದಿಂದ ಆಯ್ಕೆಯಾಗುವಂತೆ ಪಕ್ಷವನ್ನು ಸಂಘಟಿಸಬೇಕು.

ಪಕ್ಷ ಸಂಘಟನೆಗೆ ಸ್ಥಳೀಯ ಮುಖಂಡರು, ತಾಲ್ಲೂಕು ಮಟ್ಟದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಹೆಚ್ಚಿಸಲು ಶ್ರಮಿಸಬೇಕು ಎಂದು ಸಚಿವರು ನೂತನ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎ.ವೈ.ವಿಜಯ್ಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಇತರರು ಇದ್ದರು.
– ಶ್ರೀನಿವಾಸ್ ಆರ್.