ಕೆ.ಆರ್.ಪೇಟೆ;ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಧ್ಯಕ್ಷ ಹರೀಶ್ ನೇತೃತ್ವದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ

ಕೆ.ಆರ್.ಪೇಟೆ;ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು(ಗ್ರಾಮ ಲೆಕ್ಕಾಧಿಕಾರಿಗಳು) ತಮ್ಮ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಂಘದ ಜಿಲ್ಲಾಧ್ಯಕ್ಷ ಹರೀಶ್ ನೇತೃತ್ವದಲ್ಲಿ ಧರಣಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಮಂಡ್ಯ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್ ಮಾತನಾಡಿ ಮೊಬೈಲ್ ಆಪ್ ಬಳಕೆ, ವೆಬ್ ಪೇಜ್ ಸಮಸ್ಯೆ ಸೇರಿದಂತೆ, ರಜಾ ದಿನಗಳಲ್ಲಿಯೂ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ಕರ್ತವ್ಯ ನಿರ್ವಹಿಸುವಂತೆ ಕೆಲಸದ ಒತ್ತಡವನ್ನು ಹೇರಿಕೆ ಮಾಡುತ್ತಿರುವ ಸರ್ಕಾರವು ಕನಿಷ್ಠ ಮೂತಸೌಕರ್ಯಗಳನ್ನು ಒದಗಿಸಿಕೊಡಬೇಕು. ಇರುವ ವಾರಕ್ಕೊಂದು ರಜೆಯಲ್ಲೂ, ಹಬ್ಬದ ಕರ್ತವ್ಯ ಮಾಡಬೇಕು ಎಂದು ಒತ್ತಡ ಹೇರುತ್ತಿರುವುದನ್ನು ನಿಲ್ಲಿಸಬೇಕು.

ಮಾನಸಿಕ ಒತ್ತಡಗಳ ನಡುವೆ ಕೆಲಸ ಮಾಡುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಮಾನವೀಯ ನೆಲಗಟ್ಟಿನ ಆಧಾರದ ಮೇರೆಗೆ ಬಗೆಹರಿಸಿ ಅನುಕೂಲ ಮಾಡಿ ಕೊಡಬೇಕು ಎಂದು ಆಗ್ರಹಿಸಿದರು.

ಸೇವಾ ಜೇಷ್ಠತೆ ಆಧಾರದ ಮೇಲೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೇವಾ ಮುಂಬಡ್ತಿ ನೀಡುವುದು, ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವುದು ಸೇರಿದಂತೆ ರಾಜ್ಯದಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ 5000ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಹರೀಶ್ ಸರಕಾರಕ್ಕೆ ಮನವಿ ಮಾಡಿಕೊಂಡರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಚಂದ್ರಕಲಾ ಅವರು ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ತಮ್ಮ ಬೆಂಬಲವನ್ನು ಸೂಚಿಸಿದರು.

ಧರಣಿ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಚಂದ್ರಕಲಾ, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ತಾಲ್ಲೂಕು ಘಟಕ ಪದಾಧಿಕಾರಿಗಳಾದ ಸುಧಾಕರ್, ಸೋಮಾಚಾರ್, ಗೋಪಾಲಕೃಷ್ಣ, ಜ್ಞಾನೇಶ್, ಜಗದೀಶ್, ಹೊನ್ನೇಶ್, ಸಾವಿತ್ರಿ, ಅಗ್ರಹಾರಬಾಚಹಳ್ಳಿ ಸುನಿಲ್, ಕಿಕ್ಕೇರಿ ಸುನಿಲ್ ಗಾಣಿಗೇರ್, ಹಿರೀಕಳಲೆ ಸ್ಪೂರ್ತಿ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನೆಯ ನಂತರ ತಹಸೀಲ್ದಾರ್ ಅಶೋಕ್ ಅವರಿಗೆ ಮನವಿ ಸಲ್ಲಿಸಿದರು.

——————–ಶ್ರೀನಿವಾಸ್ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?