ಮಂಡ್ಯ:ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾಗಿರುವ ಮಕ್ಕಳಿಗೂ ಸರ್ಕಾರದ ವತಿಯಿಂದ ಅಧಿಕಾರಿ ಸಿಬ್ಬಂದಿಗಳು ಪ್ರೀತಿಯನ್ನು ತೋರುವ ಮೂಲಕ ಮಕ್ಕಳನ್ನು ಪೋಷಿಸುತ್ತಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಬಾಲ ಮಂದಿರ ಇವರ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಹಬ್ಬ ಹಾಗೂ ಬಾಲ ಮಂದಿರದ ಮಕ್ಕಳು ಸಿದ್ಧಪಡಿಸಿದ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳು ಈ ದೇಶದ ಸಂಪತ್ತು. ಅವರನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲಾ ಮಕ್ಕಳಿಗೂ ಸಮಾನವಾದ ಪ್ರೀತಿ ಸಿಗುವಂತಾಗಬೇಕು. ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಶೇಕ್ ತನ್ವೀರ್ ಆಸೀಫ್ ಮಾತನಾಡಿ, ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಿದ್ದು ಅದರ ಮಹತ್ವವನ್ನು ಎಲ್ಲರೂ ತಿಳಿಯುವಂತಾಗಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಬಾಲಕ ಬಾಲಕಿಯರ ಮಂದಿರದ ಮಕ್ಕಳ ಚಿತ್ರಕಲೆ ವಿವಿಧ ಮಾದರಿಯ ವಸ್ತು ಪ್ರದರ್ಶನಗಳನ್ನು ಗಣ್ಯರು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ಸಂರಕ್ಷಣಾಧಿಕಾರಿ ರಶ್ಮಿ, ಮಕ್ಕಳ ಕಲ್ಯಾಣ ಸಮಿತಿಯ ಅಶ್ವಥ್ ನಾರಾಯಣ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ದ್ರಾಕ್ಷಾಯಿಣಿ, ಮಕ್ಕಳ ರಕ್ಷಣಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.