ಕೆ.ಆರ್.ಪೇಟೆ:ಪುರಸಭೆಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ.ಆರ್.ರವೀಂದ್ರಬಾಬು ಅವರು ಆಯ್ಕೆಯಾಗಿದ್ದಾರೆ.
ಸಮಿತಿಯ ಈ ಹಿಂದಿನ ಅಧ್ಯಕ್ಷರಾದ ಹೆಚ್.ಆರ್.ಲೋಕೇಶ್ ಅವರ ಅವಧಿಯು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಪುರಸಭೆಯ ಅಧ್ಯಕ್ಷೆ ಪಂಕಜಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ.ಆರ್.ರವೀಂದ್ರಬಾಬು ಆಯ್ಕೆಯಾದರು.
ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕೆ.ಆರ್.ರವೀಂದ್ರಬಾಬು ಮತ್ತು ಹೊಸಹೊಳಲು ವಾರ್ಡಿನ ಸದಸ್ಯ ಹೆಚ್.ಎನ್.ಪ್ರವೀಣ್ ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಪ್ರವೀಣ್ ಕಣದಿಂದ ನಿವೃತ್ತರಾದ ಕಾರಣ ಅವಿರೋಧ ಆಯ್ಕೆ ನಡೆಯಿತು.
ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಆರ್.ರವೀಂದ್ರಬಾಬು ಅವರನ್ನು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಪುರಸಭೆಯ ಅಧ್ಯಕ್ಷೆ ಪಂಕಜಾ ಪ್ರಕಾಶ್, ಉಪಾಧ್ಯಕ್ಷೆ ಸೌಭಾಗ್ಯ ಉಮೇಶ್, ಪುರಸಭಾ ಸದಸ್ಯರಾದ ಡಿ.ಪ್ರೇಮಕುಮಾರ್, ಕೆ.ಬಿ.ಮಹೇಶ್ ಕುಮಾರ್, ತಿಮ್ಮೇಗೌಡ, ಇಂದ್ರಾಣಿ ವಿಶ್ವನಾಥ್, ಹೊಸಹೊಳಲು ಕಲ್ಪನಾ ದೇವರಾಜು, ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಹಾಫೀಜುಲ್ಲಾಷರೀಫ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್ ಸೇರಿದಂತೆ ಎಲ್ಲಾ ಪುರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಕೆ.ಆರ್.ರವೀಂದ್ರಬಾಬು,ನಾನು ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ಮುಖಂಡರಿಗೆ ಹಾಗೂ ಪುರಸಭೆಯ ಎಲ್ಲಾ ಸದಸ್ಯರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಪುರಸಭೆಯ ಸ್ಥಾಯಿ ಸಮಿತಿ ವತಿಯಿಂದ ಪಟ್ಟಣದ ಜನತೆಗೆ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
–———–ವರದಿ-ಶ್ರೀನಿವಾಸ್ ಕೆ ಆರ್ ಪೇಟೆ