
ತುಮಕೂರು:ದೇಶದ ತಲಾದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಭೌತಿಕ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಲ್ಲಾ ಸಮುದಾಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗಲು ಸಾಧ್ಯ. ಯಾವುದೇ ದೇಶದ ಅಭಿವೃದ್ಧಿಯು ಹಳ್ಳಿ,ತಾಲ್ಲೂಕು,ಜಿಲ್ಲೆಗಳ ಅಭಿವೃದ್ಧಿಯ ಮೇಲೆ ನಿಂತಿದೆ.ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲಾ ಧರ್ಮ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ತಲಾದಾಯ ಹೆಚ್ಚಳವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ಜಾತಿ, ಧರ್ಮ, ಪಕ್ಷ ಬೇಧವಿಲ್ಲದೆ ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಎಲ್ಲಾ ವರ್ಗದ ಜನರೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯದ ಆರ್ಥಿಕತೆಯ ವೇಗವೂ ಹೆಚ್ಚಾಗಿದೆ ಎಂದು ತಿಳಿಸಿದರು.
ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಕೊಡುತ್ತಲೇ ಬಂದಿದೆ.ಅಲ್ಲದೆ, ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ.ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಗಳನ್ನು ರಾಜ್ಯದಲ್ಲಿ ಮಾತ್ರ ಅನುಷ್ಟಾನ ಮಾಡಲಾಗಿದೆ ಎಂದು ತಿಳಿಸಿದರಲ್ಲದೆ, ನಮ್ಮ ಸರ್ಕಾರ ಮಹಿಳೆಯರು, ಎಲ್ಲಾ ಜಾತಿ ಹಾಗೂ ಧರ್ಮ, ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.
ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾತನಾಡುತ್ತಾ, ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮoತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿರುವುದರಿಂದ ಮುಂದೊoದು
ದಿನ ಜಿಲ್ಲೆಯು ವಿಶ್ವದ ಭೂಪಟದಲ್ಲಿ ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದರು. ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳೊಂದಿಗೆ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸಲು ಶ್ರಮಿಸುತ್ತಿದೆ.ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಜನರ ಆಶೋತ್ತರಗಳನ್ನು ಈಡೇರಿಸಲಾಗಿದೆ ಎಂದರು.
ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಡಿ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯಲ್ಲಿ 22ಲಕ್ಷ ಕುಟುಂಬಗಳಿಗೆ ಅನುಕೂಲಕರವಾಗಿದ್ದು, ಇದಕ್ಕಾಗಿ 474 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯ 10 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 302 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಗ್ರಹಾಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ಮಾಹೆ 2,೦೦೦ ರೂ.ಗಳಂತೆ 1673 ಕೋಟಿ ರೂ. ಜಮೆ
ಮಾಡಲಾಗಿದ್ದು, 6ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳಿಗಿಂತ ಕಡಿಮೆ ಉಪಯೋಗಿಸುವ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್ ಒದಗಿಸಲು 284 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 7.74 ಲಕ್ಷ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊoಡ 4924 ನಿರುದ್ಯೋಗಿಗಳಿಗೆ 8.42 ಕೋಟಿ ರೂ. ನಿರುದ್ಯೋಗಿ ಭತ್ಯೆಯನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಪಂಚ ಗ್ಯಾರಂಟಿಗಳಿಗಾಗಿ ಇದುವರೆಗೆ ರಾಜ್ಯದಲ್ಲಿ 2742 ಕೋಟಿ ರೂ.ಗಳು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ಸರ್ಕಾರದ ಸಾಧನೆಗೆ ನೆರೆದಿರುವ ಜನಸ್ತೋಮವೇ ಸಾಕ್ಷಿ.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತಿಯಿoದ ಎಲ್ಲಾ ಇಲಾಖೆ, ನಿಗಮ, ಮಂಡಳಿಗಳು ಸಾವಿರಾರು ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುತ್ತಿರುವುದು ಸರ್ಕಾರಕ್ಕೆ ಸಂತಸ ತ0ದಿದೆ. ಇಂತಹ ಜನಕಲ್ಯಾಣ ಕಾರ್ಯಕ್ರಮಗಳು ಇತರೆ ಜಿಲ್ಲೆಗಳಲ್ಲಿಯೂ ಆಯೋಜಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಕ್ರಾಂತಿಯೋಗಿ ಬಸವಣ್ಣ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಕರ್ಮಭೂಮಿಯಾದ ರಾಜ್ಯದ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗಳು ಶಕ್ತಿ ನೀಡಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗ ಹತ್ತಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಭೂಸ್ವಾಧೀನ,ಹಕ್ಕುಪತ್ರ ವಿತರಣೆ ಸಾಧನೆ ಮಾಡಿದ ಕಂದಾಯ ಇಲಾಖೆಗೆ ಅಭಿನಂದನೆ ತಿಳಿಸಿದರಲ್ಲದೆ, ಜಿಲ್ಲೆಗೆ ಕುಡಿಯುವ ನೀರು ಒದಗಿಸಲು ನೀರಾವರಿ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಗೊಳಿಸಲಾಗುವುದು. ಜಿಲ್ಲೆಯ 7 ಶಾಸಕರನ್ನು ಆಯ್ಕೆ ಮಾಡಿ ಸರ್ಕಾರದ ಅಭ್ಯುದಯಕ್ಕೆ ಕಾರಣರಾಗಿ ಆಡಳಿತವನ್ನು ಮುನ್ನೆಡೆಸಲು ಶಕ್ತಿ ನೀಡಿದ ಈ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸರ್ಕಾರ ಬದ್ಧವಾಗಿದೆ. ಜನರು ನಮ್ಮ
ಸರ್ಕಾರವನ್ನು ನಂಬಿ ಗೆಲ್ಲಿಸಿದ್ದಾರೆ. ಜನರ ನಂಬಿಕೆಯನ್ನು ಹುಸಿ ಮಾಡುವುದಿಲ್ಲವೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಟಿ.ಬಿ.ಜಯಚಂದ್ರ,ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೆಶ್, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ,ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಸೇರಿದoತೆ ಮತ್ತಿತರ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
——————ಕೆ.ಬಿ ಚಂದ್ರಚೂಡ