ಬೇಲೂರು – ತಾಲೂಕಿನ ಅರೇಹಳ್ಳಿ ಹೋಬಳಿ ಬೆಳ್ಳಾವರ ಗ್ರಾಮದ ಮನೆಯ ಅಕ್ಕಪಕ್ಕದಲ್ಲಿ ಮುಂಜಾನೆ ಒಂಟಿ ಸಲಗ ಓಡಾಡುತ್ತಿರುವ ದೃಶ್ಯವನ್ನು ಕಂಡ ಇಲ್ಲಿನ ಗ್ರಾಮಸ್ಥರು ತಮ್ಮ ಮೊಬೈಲ್ ನಲ್ಲಿ ಸೆರೆಡಿದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಈ ದೃಶ್ಯ ನೋಡಿದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಶ್ರೀಘ್ರವೇ ಕಾಡಾನೆಗಳನ್ನು ಸ್ಥಳಾಂತರಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಗೆಂಡೆಹಳ್ಳಿ ಮಲೆನಾಡು ಪ್ರಾಂತ್ಯದಲ್ಲಿ ಈಗಾಗಲೇ ಕಳೆದ ಎರಡು ವರ್ಷದಿಂದಲೂ ಆನೆಗಳ ಹಾವಳಿಯಿಂದ ಇಲ್ಲಿನ ಜನ ತತ್ತರಿಸಿದ್ದಾರೆ. ವಿಶೇಷವಾಗಿ ಕಳೆದ ಐದು ತಿಂಗಳಿನಿಂದ ಬಿಕ್ಕೋಡು ಹೋಬಳಿಯಲ್ಲಿ ಸುಮಾರು 55ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಮತ್ತು ಕೂಲಿ ಕೆಲಸ ಮಾಡುವ ಕಾರ್ಮಿಕರಿಗೆ ಗಂಭೀರವಾಗಿ ಗಾಯಗೊಳಿಸಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಈ ಕೂಡಲೇ ಸಂಬಂಧ ಪಟ್ಟಂತವರು ಶಾಶ್ವತವಾಗಿ ಆನೆಗಳನ್ನು ಸ್ಥಳಾಂತರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಬೆಳ್ಳಾವರ ಆಗ್ರಹಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲೂರು ತಾಲೂಕಿನಲ್ಲಿ ಹತ್ತಾರು ಬಾರಿ ಪ್ರತಿಭಟನೆಗಳು ರಸ್ತೆ ತಡೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದರೂ, ಕೂಡ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟಂತ ಸರ್ಕಾರ ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕೈ ಚೆಲ್ಲಿ ಕುಳಿತಿದ್ದಾರೆ. ಮಲೆನಾಡಿಗರ ಜೀವನ ಅತ್ಯಂತ ಕಷ್ಟಕರವಾಗಿದೆ ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕಾಡನೆಗಳನ್ನು ಸ್ಥಳಾಂತರಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆ ಮುಂದೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.