ಚಿಕ್ಕಮಗಳೂರು: ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನೀಡುವುದರೊಂದಿಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕಡೂರು ಇವರ ವತಿಯಿಂದ ಬಾಣೂರು ಮತ್ತು ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನ ಸಂಪರ್ಕ ಸಭೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಗೆಹರಿಯಬಹುದಾದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜನರ ಮನೆ ಬಾಗಿಲಿಗೆ ಅಧಿಕಾರಿಗಳನ್ನು ಕರೆತಂದು ಪ್ರತಿಯೊಬ್ಬ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವುದೇ ಜನ ಸಂಪರ್ಕ ಸಭೆಯ ಮುಖ್ಯ ಉದ್ದೇಶವಾಗಿದೆ, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡ್ಡಿಯಾಗಿಲ್ಲ ಎಂದು ತಿಳಿಸಿದರು.
ಜನ ಸಂಪರ್ಕ ಸಭೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಗೆಹರಿಯಬಹುದಾದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜೊತೆಗೆ ಯಾವುದೇ ಇಲಾಖೆಗೆ ಸಂಬಂಧಿಸಿದ ದೂರುಗಳು ಬಂದರು ಸಂಬಂಧಪಟ್ಟ ಅಧಿಕಾರಿಗಳು ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಿ ಕೊಡಬೇಕೆಂದು ಸೂಚಿಸಿದರು.

ಸರ್ಕಾರವು ಬಡವರ ಹಾಗೂ ಮಹಿಳಾ ಸಬಲೀಕರಣದ ಉದ್ದೇಶದಿಂದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿಯಂತಹ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಎಲ್ಲಾ ವರ್ಗದ ಬಡವರನ್ನು ಪ್ರೋತ್ಸಾಹಿಸಿ ಅಭಿವೃದ್ಧಿಗೊಳಿಸುವ ಉದ್ದೇಶವನ್ನು ಹೊಂದಿದೆ. ವರ್ಷಕ್ಕೆ ಸುಮಾರು ೫೯ ಸಾವಿರ ಕೋಟಿ ರೂಗಳಷ್ಟು ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ವ್ಯಯಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಯಾವುದೇ ಅಡೆತಡೆಗಳಾಗಿಲ್ಲ ಎಂದು ಹೇಳಿದರು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ೨೫ ಕೋಟಿ ರೂ.ಗಳ ವಿಶೇಷ ಅನುದಾನವನ್ನು ನೀಡಲಾಗಿದೆ. ಇದರಲ್ಲಿ ನಾಗೇನಹಳ್ಳಿ ಪಂಚಾಯಿತಿ ವ್ಯಾಪ್ತಿಗೆ ಒಟ್ಟು 71 ಲಕ್ಷ ರೂ.ಗಳ ಕಾಮಗಾರಿಗೆ ಶಂಕು ಸ್ಥಾಪಿಸಲಾಗಿದೆ. ಬಾಳೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೯೫ ಲಕ್ಷ ರೂ.ಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.
ಚಂದ್ರಶೇಖರಪುರ, ಗೊಲ್ಲರ ಹಟ್ಟಿ ಹಾಗೂ ಕೇತಮಾರನಹಳ್ಳಿ ರಸ್ತೆ ನಿರ್ಮಾಣ ಕಾಮಗಾರಿಗೆ ಸುಮಾರು ೪ ಕೋಟಿ ಅನುದಾನ ಮೀಸಲಿಡಲಾಗಿದೆ ಹಾಗೂ ಬಾಣಾವರ ಸಖರಾಯಪಟ್ಟಣ ದಿಂದ ಶಿವಪುರ ವರೆಗೆ ರಸ್ತೆ ಅಭಿವೃದ್ಧಿಗಾಗಿ ೧ ಕೋಟಿ ಅನುದಾನ ಇರಿಸಿದ್ದು, ಅಂದಾಜು ಪಟ್ಟಿ ತಯಾರಿಸಿ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಲಾಗುವುದು, ಹಿರೇಗೌಜ ಭಾಗದಲ್ಲಿ ೧೫ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಿಸಿ ಸುಮಾರು ೫೦೦೦ ಜನರಿಗೆ ಉದ್ಯೋಗ ಕಟ್ಟಿಕೊಡುವ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಈ ಬಾಗದಲ್ಲಿ ವಿದ್ಯುತ್ ಸಂಬಂಧಿಸಿದಂತೆ ಹೆಚ್ಚು ಸಮಸ್ಯೆಗಳಿದ್ದು ಅವುಗಳ ಪರಿಹಾರಕ್ಕೆ ಕ್ರಮವಹಿಸಲಾಗಿದೆ ಎಂದ ಅವರು ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನನ್ನ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದರು.

ಕಡೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್ ಮಾತನಾಡಿ, ಜನ ಸಂಪರ್ಕ ಸಭೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡುವಂತ ಪರಿಕಲ್ಪನೆ ಉತ್ತಮವಾಗಿದೆ. ಸರ್ಕಾರದ ಆಡಳಿತ ವ್ಯವಸ್ಥೆಯೇ ಜನರ ಬಳಿ ಬಂದು ಅವರ ಸಮಸ್ಯೆಗಳನ್ನು ಅಹವಾಲುಗಳನ್ನು ಸಕಾರಾತ್ಮಕವಾಗಿ ಆಲಿಸಿ ಸಮಸ್ಯೆಗೆ ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸಿ ಕೊಡುವುದೇ ಜನ ಸಂಪರ್ಕ ಸಭೆಯ ಮುಖ್ಯ ಉದ್ದೇಶವಾಗಿದೆ.
ಸಭೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದು ತಮ್ಮ ಕುಂದುಕೊರತೆಗಳನ್ನು ಪರಿಶೀಲಿಸಿ ಇತ್ಯರ್ಥಗೊಳಿಸಲಾಗುವುದು ಎಂದ ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಪ್ರತಿ ತಿಂಗಳು ಮೊದಲನೇ ಶನಿವಾರ ಪಂಚಾಯಿತಿ ಕಟ್ಟೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು ಸಾರ್ವಜನಿಕರು ಪಂಚಾಯಿತಿ ಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ಬಿತ್ತರಿಸುವುದರ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಮಂಜುನಾಥ್, ಬಾಣೂರು ಗ್ರಾ.ಪಂ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷ ಮಮತ ಜ್ಞಾನೇಂದ್ರ, ನಾಗೇನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಚಂದ್ರಮ್ಮಮಂಜಪ್ಪ ,ಉಪಾಧ್ಯಕ್ಷೆ ಚಂದ್ರಮ್ಮ ಮರಿಯಪ್ಪ, ಸಖರಾಯಪಟ್ಟಣ ಗ್ರಾ.ಪಂ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷೆ ತಾರ, ಹುಲಿಕೆರೆ ಗ್ರಾ.ಪಂ ಅಧ್ಯಕ್ಷೆ ರತ್ನಮ್ಮ, ಸದಸ್ಯರುಗಳಾದ ವಸಂತ್‌ಕುಮಾರ್, ರವೀಶ್, ಲೀಲಮ್ಮ, ರಾಜಪ್ಪ, ಚಂದ್ರನಾಯ್ಕ್, ಪಿ. ಮಹೇಶ್, ಭಾಗ್ಯ, ನವೀನ್‌ಕುಮಾರ್, ರೇಣುಕಾಮೂರ್ತಿ, ಕಲ್ಮುರಡಪ್ಪ, ಮಂಜುಳಮ್ಮ, ಯಶೋಧಬಾಯಿ, ಉಮಾಕಾಂತ್, ದ್ರಾಕ್ಷಾಯಿಣಿ, ಲೋಕೇಶ್‌ಮೂರ್ತಿ, ಉಪಸ್ಥಿತರಿದ್ದರು.