ಚಿಕ್ಕಮಗಳೂರು– ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಸಂತವೇರಿ ಗ್ರಾಮವನ್ನು ಕ್ಷಯ ರೋಗ ಮುಕ್ತ ಮಾಡಲಾಗಿದೆ ಎಂದು ಕಾಮನದುರ್ಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾನಸ ರಜನಿ ಸಂತೋಷ ವ್ಯಕ್ತಪಡಿಸಿದರು.
ಅವರು ಸೋಮವಾರ ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ, ಸರ್ಕಾರೇತರ ಸಂಘ-ಸಂಸ್ಥೆಗಳು, ವಿವಿಧ ಕಾಲೇಜುಗಳ ಆಶ್ರಯದಲ್ಲಿ ನಡೆದ ವಿಶ್ವ ಕ್ಷಯ ರೋಗ 2025 ಹಾಗೂ ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ತರೀಕೆರೆ ತಾಲ್ಲೂಕಿನ ಗಡಿ ಗ್ರಾಮದಲ್ಲಿ ಕ್ಷಯ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಈ ಕಾಯಿಲೆಯಿಂದಾಗುವ ಅನಾನುಕೂಲಗಳ ಕುರಿತು ಜಾಥಾ ನಡೆಸಿ, ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂಬಂಧ ಸ್ಥಳಿಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಜನಪಯೋಗಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಹರೀಶ್ ಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮಂಜುನಾಥ್, ಕುಟುಂಬ ಕಲ್ಯಾಣಾಧಿಕಾರಿ ಶಶಿಕಲಾ, ವೈದ್ಯಾಧಿಕಾರಿ ಡಾ.ವಿದ್ಯಾಸಾಗರ್ ಸೇರಿದಂತೆ ಮತ್ತಿತರರು ಇದ್ದರು.