ಕೆ.ಆರ್.ಪೇಟೆ: ಪುರಸಭಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ನೌಕರರು ಪಟ್ಟಣದ ಪುರಸಭಾ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕೆ.ಆರ್.ಪೇಟೆ: ಪಟ್ಟಣದ ಪುರಸಭೆ ಮುಂಭಾಗ ಜಮಾಯಿಸಿದ ನೌಕರರು, ಸರ್ಕಾರ, ಸಚಿವರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಪೌರ ನೌಕರರ ಸಂಘದ ಕಾರ್ಯಕಾರಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆ ಅನಿವಾರ್ಯವಾಗಿತ್ತು ಎಂದು ನೌಕರರು ತಿಳಿಸಿದರು.
ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರನಿರ್ವಹಿಸುವ ಪೌರ ನೌಕರರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಚತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಕೆಲಸಗಳನ್ನು ಸ್ಥಗಿತಗೊಳಿಸಲಿದ್ದಾರೆ. ಬೇಡಿಕೆಗಳ ಈಡೇರುವರೆವಿಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪೌರ ಕಾರ್ಮಿಕರ ಬೇಡಿಕೆಗಳೇನು ?
ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗದು ರಹಿತ ಆರೋಗ್ಯಚಿಕಿತ್ಸಾ ಸೌಲಭ್ಯ ಯೋಜನೆಯಾದ ಜ್ಯೋತಿ ಸಂಜೀವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನೂ ನೀಡಬೇಕು.
ರಾಜ್ಯದ ನಗರ ಸ್ಥಳೀಯಸಂಸ್ತೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರ, ವಾಹನ ಚಾಲಕರು, ಲೋಡರ್ಗಳು, ಕ್ಲೀನರ್ಗಳು,ಸ್ವಚ್ಚತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು.
ವಾಹನ ಚಾಲಕರು, ನೀರು ಪೂರೈಕೆ ನೌಕರರು ನೇರ ಪಾವತಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ನೌಕರರಿಗೆ ಎಸ್ಎಫ್ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಪುರಸಭಾ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಚಲುವರಾಜು, ಗೌರವಾಧ್ಯಕ್ಷ .ಪಿ.ಚನ್ನಯ್ಯ. ಕೆ.ಎಂ.ಚಂದ್ರು ಉಪಾಧ್ಯಕ್ಷರು, ಪಳನಿ ಸಂಘಟನಾ ಕಾರ್ಯದರ್ಶಿ, ಖಂಜಾಚಿ ಕೆ.ಎಂ.ಮಂಜು, ಕಂದಾಯ ಅಧಿಕಾರಿಗಳಾದ ರವಿಕುಮಾರ್, ಹಿರಿಯ ಆರೋಗ್ಯಾಧಿಕಾರಿ ಆಶೋಕ್ ಕುಮಾರ್, ಪೌರ ಸೇವಾ ನೌಕರರ ಸಂಘ ಸದಸ್ಯರು ಸೇರಿದಂತೆ ನೂರಾರು ಪೌರಕಾರ್ಮಿಕರು, ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- ಶ್ರೀನಿವಾಸ್ ಆರ್.