ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನ ನೀಡಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ರಾಜ್ಯಾದ್ಯಕ್ಷ ಮಲ್ಲಿಕಾರ್ಜುನ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅವರು ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳು ಸಂಕುಚಿತ ಮನೋಭಾವನೆ ಇಟ್ಟುಕೊಳ್ಳದೇ ನಿಮಗೆ ಯಾವುದರ ವಿಷಯದಲ್ಲಿ ಆಸಕ್ತಿ ಇರುತ್ತದೆಯೋ ಅದರಲ್ಲಿ ಹೆಚ್ಚಿನ ಅಭ್ಯಾಸ ಮಾಡಿ ಸಾಧನೆ ಮಾಡಿದಾಗ ಸಮಾಜದಲ್ಲಿ ನಿಮಗೆ ಗೌರವ ಪ್ರಶಸ್ತಿ ಲಭಿಸಿದಾಗ ನಿಮಗೆ ಜನ್ಮ ಕೊಟ್ಟ ತಂದೆ ತಾಯಿಗಳು, ಶಿಕ್ಷಣ ಹೇಳಿಕೊಟ್ಟ ಶಿಕ್ಷಕರು ಹಾಗೂ ಹುಟ್ಟಿದ ಊರಿಗೆ ಕೀರ್ತಿ ಬರುತ್ತದೆ.

ಉದಾಹರಣೆಗೆ ಕೆಲವು ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳ ಕಡೆಗೆ ಹೆಚ್ಚು ಗಮನ ಹರಿಸುತ್ತಾರೆ.ಕೆಲವು ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಕಡೆಗೆ ಗಮನ ನೀಡುತ್ತಾರೆ. ಕೆಲವು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಾರೆ. ಪೋಷಕರು ಸಹ ತಮ್ಮ ಮಕ್ಕಳು ಯಾವ ವಿಷಯಗಳ ಬಗ್ಗೆ ಆಸಕ್ತಿ ವಹಿಸುತ್ತಾರೆ ಎಂಬುದನ್ನು ತಿಳಿದು ಅದಕ್ಕೆ ಪ್ರೋತ್ಸಾಹ ನೀಡುವಂತೆ ಪೋಷಕರು ಹಾಗೂ ಶಿಕ್ಷಕರಿಗೆ ಸಲಹೆ ನೀಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವುದರಿಂದ ಬಡವರಿಗೆ ಶಿಕ್ಷಣವನ್ನು ಉಚಿತವಾಗಿ ಕೊಡಿಸಬಹುದಾಗಿದೆ. ಇಲ್ಲದಿದ್ದರೆ ಬಡವರಿಗೆ ಶಿಕ್ಷಣವು ಗಗನ ಕುಸುಮವಾಗಲಿದೆ. ಹಾಗಾಗಿ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸುವ ಅಗತ್ಯವಿದೆ ಎಂದು ಆರ್.ಟಿ.ಓ. ಮಲ್ಲಿಕಾರ್ಜುನ್ ತಿಳಿಸಿದರು.
ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಕ್ರೀಡೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಾದ ಸ್ಮಿತಾ ಹಾಗೂ ವಿಕಾಸ್ ಅವರನ್ನು ಅಭಿನಂದಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಕಿರಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಶಾಸಕ ಹೆಚ್.ಟಿ.ಮಂಜು ಸಹೋದರ ಲೋಕೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಆನಂದಕುಮಾರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಕಿರಣ್, ತಾಲ್ಲೂಕು ಎಸ್ಸಿ-ಎಸ್ಟಿ ನೌಕರರ ಸಂಘದ ಅಧ್ಯಕ್ಷ ಹಳೆಯೂರು ಯೋಗೇಶ್, ಮಂಜುನಾಥ್, ಸಿ.ಆರ್ ಸಿ ನಾಗೇಂದ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಸಂಘಟನಾ ಕಾರ್ಯದರ್ಶಿ ಜಿ.ಎಸ್.ಮಂಜು, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಬೋರ್‌ವೆಲ್ ಮಹೇಶ್, ಶಿಕ್ಷಣ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ್, ಮುಖ್ಯ ಶಿಕ್ಷಕ ಎನ್.ಸಿ.ವೀರಪ್ಪ, ಬಸವರಾಜು, ರವಿ, ಕುಮಾರ್, ಹೇಮಚಂದ್ರ, ಉದಯ್ ಸೇರಿದಂತೆ ಪೋಷಕರು, ಬಳ್ಳೇಕೆರೆ ಹಾಗೂ ಸುತ್ತಮುತ್ತಲಿನ ಸಾವಿರಾರು ಮಂದಿ, ಗ್ರಾಮಸ್ಥರು, ಪೋಷಕರು ಭಾಗವಹಿಸಿದ್ದರು.
-ಶ್ರೀನಿವಾಸ