ಕೆ.ಆರ್.ಪೇಟೆ: ಹೆಣ್ಣು ಮಕ್ಕಳು ನಮ್ಮ ರಾಷ್ಟ್ರದ ಶಕ್ತಿಯಾಗಿದ್ದಾರೆ. ಕುಟುಂಬದ ನಿರ್ವಹಣೆ ಹಾಗೂ ದೇಶದ ಅಭಿವೃದ್ಧಿಗೆ ಹೆಣ್ಣುಮಕ್ಕಳ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಹೆಚ್.ಟಿ.ಮಂಜು ಅವರು ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಗುರು ಭವನದಲ್ಲಿ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಾಲೂಕು ಆಡಳಿತವು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರೇರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ತಮ್ಮಲ್ಲಿನ ಕೀಳರಿಮೆಯನ್ನು ಅಳಿಸಿ ಹಾಕಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿ ತಮ್ಮಲ್ಲಿನ ವೃತ್ತಿ ಕೌಶಲ್ಯವನ್ನು ಸದ್ಭಳಕೆ ಮಾಡಿಕೊಂಡು ಗುಡಿ ಕೈಗಾರಿಕೆಗಳ ಮೂಲಕ ಮಹಿಳಾ ಸಬಲೀಕರಣ ಸಾಧಿಸಿ ತಮ್ಮ ಕುಟುಂಬವನ್ನು ಮುನ್ನಡೆಸುವ ಜೊತೆಗೆ ನೂರಾರು ನಿರುದ್ಯೋಗಿ ಮಹಿಳೆಯರಿಗೆ ಸ್ವಂತ ಉದ್ಯೋಗ ನೀಡುವ ಸಾಮರ್ಥ್ಯವನ್ನು ಬೆಳೆಸಿಕೊಂಡು ಸಾಧನೆ ಮಾಡಬೇಕು ಎಂದು ಶಾಸಕ ಮಂಜು ಕರೆ ನೀಡಿದರು.

ಪುರಸಭೆ ಅಧ್ಯಕ್ಷೆ ಪಂಕಜಾಪ್ರಕಾಶ್ ಮಾತನಾಡಿ ಹೆಣ್ಣುಮಕ್ಕಳು ಈ ರಾಷ್ಟ್ರದ ಶಕ್ತಿಯಾಗಿದ್ದಾರೆ. ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡಿ ಭಾರತ ದೇಶವನ್ನು ಮುನ್ನಡೆಸುತ್ತಿದ್ದಾರೆ. ಹೆಣ್ಣುಮಕ್ಕಳು ಸಮಾಜದ ನಿಂದನೆ ಹಾಗೂ ಟೀಕೆ ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳದೇ ಆತ್ಮ ವಿಶ್ವಾಸದಿಂದ ಮುನ್ನಡೆದು ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಮಾತನಾಡಿ ಸಮಾಜ ಸೇರಿದಂತೆ ಕುಟುಂಬ ಹಾಗೂ ಸಂಸಾರದ ಮುನ್ನಡೆಗೆ ಹೆಣ್ಣುಮಕ್ಕಳ ಕೊಡುಗೆಯು ಅಪಾರವಾಗಿದೆ. ಹೆಣ್ಣುಮಕ್ಕಳು ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಗುರಿಸಾಧನೆ ಮಾಡಲು ತಮ್ಮಲ್ಲಿರುವ ವೃತ್ತಿ ಕೌಶಲ್ಯದ ಜ್ಞಾನವನ್ನು ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಡಾ.ಎಸ್.ಯು.ಅಶೋಕ್, ಬಿ.ಇ.ಓ.ತಿಮ್ಮೇಗೌಡ, ಸಿಡಿಪಿಓ ಅರುಣ್ ಕುಮಾರ್, ತಾಲೂಕು ಸಮಾಜ ಕಲ್ಯಾಣಧಿಕಾರಿ ಡಾ.ದಿವಾಕರ್, ವಲಯ ಅರಣ್ಯ ಅಧಿಕಾರಿ ಅನಿತಾ, ತಾಲ್ಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾ, ಅಂಗನವಾಡಿ ಮೇಲ್ವಿಚಾರಕರಾದ ಪದ್ಮಮ್ಮ, ಶಾಂತವ್ವ.ಎಸ್.ಹಾವಣ್ಣನವರ್, ಶಿಕ್ಷಕಿ ಸಿ.ರಾಧಾ, ಕುಮಾರಿಪದ್ಮೇಶ್, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
– ಶ್ರೀನಿವಾಸ್ ಆರ್.