ಮಂಡ್ಯ:- ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗಿಂತಲೂ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿಯಾಗಿದ್ದು, ಮಹಿಳೆಯರು ಮಹಿಳೆಯರಿಗಾಗಿ ಒತ್ತಾಸೆಯಾಗಿ ನಿಂತು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್. ಡಿ ಕುಮಾರಸ್ವಾಮಿಯವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್, ಜಲಜೀವನ್ ಮಿಷನ್ ಮತ್ತು ಸ್ವಚ್ಛಭಾರತ್ ಮಿಷನ್ ವತಿಯಿಂದ ಇಂದು(ಏ. 8) ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಘೋಷವಾಕ್ಯ: Accelerate Action ವೇಗವರ್ಧನೆಗಾಗಿ ಕ್ರಮಕೈಗೊಳ್ಳೋಣ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಗ್ರಾಮೀಣ ಪದ್ದತಿಯನ್ನು ಒಳಗೊಂಡಂತಹ ಹಾಗೂ ಆಧುನಿಕ ಸ್ಪರ್ಧೆಗಳನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಜಿಲ್ಲೆಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಪ್ರತಿಯೊಂದು ಹಳ್ಳಿಗಳಲ್ಲಿ ಮಹಿಳೆಯರು ವಾರಕ್ಕೊಮ್ಮೆ ಗುಂಪು ಸೇರಿ ಸರ್ಕಾರದ ಯೋಜನೆಗಳ ಬಗ್ಗೆ ಚರ್ಚೆಯನ್ನು ನಡೆಸಿ ಅದರ ಬಗ್ಗೆ ಅರಿವು ಮೂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾವು ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಶೇ 100 ರಷ್ಟು ಪಡೆದುಕೊಳ್ಳಿ ಎಂದು ಮಹಿಳೆಯರಿಗೆ ಕಿವಿಮಾತು ಹೇಳಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಕೃಷಿಕರಿಗೆ ನೀಡಿರುವ ಹಲವಾರು ಯೋಜನೆಗಳ ಸದ್ಭಳಕೆಯನ್ನು ಪಡೆದುಕೊಳ್ಳಿ. ಕೇಂದ್ರ ಸರ್ಕಾರದ ಜಲ್ ಜೀವನ್ ಮಿಷನ್, ಮುದ್ರಾ ಯೋಜನೆ, ನರೇಗಾ ಯೋಜನೆಗಳನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿ ಎಂದರು.
ಕೆಲವು ಅನಿವಾರ್ಯ ಸಂದರ್ಭಗಳಲ್ಲಿ ಹಾಗೂ ಕಷ್ಟದ ಸಂದರ್ಭದಲ್ಲಿ ಮಹಿಳೆಯರು ಸ್ತ್ರೀ ಶಕ್ತಿ ಸಂಘಗಳು ಮತ್ತು ಮೈಕ್ರೋ ಫೈನಾನ್ಸ್ ಗಳಂತ ಸಂಸ್ಥೆಗಳಲ್ಲಿ ಸಾಲ ಪಡೆಯಬೇಕಾಗುತ್ತದೆ. ಅದರೆ ಸಾಲ ಪಡೆಯುವಾಗ ಮತ್ತು ವ್ಯವಹಾರಿಸುವಾಗ ಎಚ್ಚರಿಕೆಯಿಂದಿರಬೇಕು. ಎಂದು ತಿಳುವಳಿಕೆಯನ್ನು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್,ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.