ಮಂಡ್ಯ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್.ಇ.ಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ: ಪುಷ್ಪ ಅಮರನಾಥ್ ಅವರು ಇಂದು ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಚಾಲನೆ ನೀಡಿದರು.
ಚಾಲನೆ ನೀಡಿದ ನಂತರ ಮಾತನಾಡಿದ ಅವರು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಲು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿದೆ ಎಂದರು.
ಎಲ್ ಇ.ಡಿ ವಾಹನವು ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಸಂಚರಿಸಿ ಗ್ರಾಮೀಣ ಭಾಗದ ಜನರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದರು.
ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಮಂಡ್ಯ ತಾಲ್ಲೂಕು ಅಧ್ಯಕ್ಷ ರುದ್ರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್. ಹೆಚ್, ಅರುಣೋದಯ ಕಲಾ ತಂಡದ ಮುಖ್ಯಸ್ಥೆ ಮಂಜುಳಾ, ಕಲಾವಿದರಾದ ಸೋಮಶೇಖರ್, ವನಿತಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.