ತುಮಕೂರು: ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಏಕೆಂದರೆ ಆರೋಗ್ಯವಿದ್ದರೆ ಏನು ಬೇಕಾದರೂ ಸಾಧಿಸಬಹುದು ಇಂದಿನ ಕಾಲದಲ್ಲಿ ಆರೋಗ್ಯವನ್ನು ಹೊಂದಿರುವನೇ ನಿಜವಾದ ಶ್ರೀಮಂತ ಎಂದು ಡಾ. ಕೀರ್ತಿ ಸುಂದರ್ ತಿಳಿಸಿದರು.
ನಗರದ ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹೆಲ್ತ್ ಎಜುಕೇಶನ್ ಸೆಲ್ ಹಾಗೂ ಶ್ರೀ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಕೀರ್ತಿಸುಂದರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕ ಕಾಲದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ ಆರೋಗ್ಯವಂತ ದೇಶವಾಗಬೇಕಾದರೆ ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿರಬೇಕು ದೇಶವೇ ಧರ್ಮ ಎಂದು ತಿಳಿದು ದೇಶ ಸೇವೆಗೆ ಸಿದ್ದರಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ. ಬಿ.ನಿಜಲಿಂಗಪ್ಪನವರು ಮಾತನಾಡುತ್ತಾ ವಿದ್ಯಾರ್ಥಿಗಳು ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಆಹಾರ ಕ್ರಮವೇ ಆರೋಗ್ಯದ ಮೂಲ, ಆರೋಗ್ಯವಂತ ಮನುಷ್ಯ ದೇಶದ ಸಂಪತ್ತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಪ್ರೊ .ಸಿ.ಎಸ್.ಸೋಮಶೇಖರಯ್ಯ, ಹೆಲ್ತ್ ಎಜುಕೇಶನ್ ಸೆಲ್ ಸಂಚಾಲಕರಾದ ಡಾ.ರಂಗನಾಥ್, ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಹಾಗೂ ಕಾಲೇಜಿನ ಬೋಧಕ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಹಾಜರಿದ್ದರು.ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
– ಕೆ.ಬಿ.ಚಂದ್ರಚೂಡ