ತುಮಕೂರು-ಏ.14ರಂದು-ಡಾ: ಬಿ.ಆರ್.ಅಂಬೇಡ್ಕರ್-ಕುರಿತು- ಛಾಯಾಚಿತ್ರ-ಪ್ರದರ್ಶನ

ತುಮಕೂರು: ಮಹಾನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ 14ರಂದು ಏರ್ಪಡಿಸಿರುವ ಡಾ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ 134ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು  ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ತಿಳಿಸಿದರು.

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ  ಗುರುವಾರ ಡಾ: ಬಿ.ಆರ್. ಅಂಬೇಡ್ಕರ್ ರ್ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಏಪ್ರಿಲ್ ೧೪ರಂದು ಮಹಾನಗರಪಾಲಿಕೆ ಆವರಣದಲ್ಲಿ ಸಿದ್ಧತೆಯಾಗುತ್ತಿರುವ ಹೆಲಿಕ್ಯಾಪ್ಟರ್ ಮಾದರಿಯನ್ನೂ ಸಹ ಉದ್ಘಾಟಿಸಲಾಗುವುದು. ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯ ಸಚಿವರು ಆಗಮಿಸಲಿದ್ದಾರೆ. ಬೌದ್ಧ ಧರ್ಮದ ಅನುಯಾಯಿಗಳಿಂದ ಪಂಚಶೀಲಾ ಪಠನೆಯನ್ನು ಏರ್ಪಡಿಸಲಾಗಿದೆ ಎಂದರು.

ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೩೦ ಸಾಧಕರು  ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ  ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಲೇಸರ್ ಶೋ, ಬಾಣ-ಬಿರುಸುಗಳ ಪ್ರದರ್ಶನವನ್ನು ಏರ್ಪಡಿಸಬೇಕೆಂದು ಸೂಚಿಸಿದರು.

ಎಲ್ಲ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮವನ್ನು ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

 ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

× How can I help you?