ತುಮಕೂರು : ನಡೆದಾಡುವ ದೇವರೆಂದೇ ಭಕ್ತಾದಿಗಳು ನಂಬಿರುವ ಡಾ|| ಶಿವಕುಮಾರ ಶ್ರೀಗಳ 118ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಶ್ರೀ ಸಿದ್ಧಗಂಗಾ ಮಠದಲ್ಲಿ ಏಪ್ರಿಲ್ ೧ರಂದು ನಡೆಯಲಿರುವ ತ್ರಿವಿಧ ದಾಸೋಹಿ ಡಾ|| ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಲು ಕೇಂದ್ರ ರಕ್ಷಣಾ ಸಚಿವ ರಾಮನಾಥ ಸಿಂಗ್ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರೊಂದಿಗೆ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಚಿವರು ಅಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರ ವಸತಿನಿಲಯಗಳನ್ನೂ ಸಹ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಶ್ರೀ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ನೇತೃತ್ವವಹಿಸಲಿದ್ದು, ಸುತ್ತೂರು ಮಠದ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಲಿದ್ದಾರೆ. ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರಸ್ವಾಮಿ, ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಹಾಗೂ ಸುರೇಶ್‌ಗೌಡ, ನಾಡಿನೆಲ್ಲೆಡೆಯಿಂದ ಅಸಂಖ್ಯಾತ ಭಕ್ತಾದಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಅಸಂಖ್ಯಾತ ಜನರು ಸೇರುವುದರಿಂದ ರಕ್ಷಣಾ ಸಚಿವರ ಭೇಟಿ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಹಾಗೂ ವಾಹನ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.