ತುಮಕೂರು-ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ – ಸಹಕರಿಸಲು ಅಧಿಕಾರಿಗಳಿಗೆ ಸೂಚನೆ-ಚಂದ್ರಶೇಖರ್ ಗೌಡ

ತುಮಕೂರು,ಜೂ.12: ಜಿಲ್ಲೆಯಲ್ಲಿ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಂಪೂರ್ಣವಾಗಿ ಸಹಕರಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಗುರುವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಮಾಹಿತಿ ನೀಡಿದ ನಂತರ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಪ್ರತಿ ತಿಂಗಳು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ-ಕಾಲೇಜು ಸಮಯದಲ್ಲಿ ಸೂಕ್ತ ಬಸ್ ಸೇವೆ ಲಭ್ಯವಿಲ್ಲದ ಕಾರಣ ವಿದ್ಯಾರ್ಥಿನಿಯರು ಶಕ್ತಿ ಯೋಜನೆಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಕರ್ಯವನ್ನು ಕಲ್ಪಿಸಬೇಕು. ಅದೇ ರೀತಿ ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಮರ್ಪಕವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಉಪಾಧ್ಯಕ್ಷರಾದ ಹೆಚ್.ಸಿ. ಹನುಮಂತಯ್ಯ, ನರಸೀಯಪ್ಪ, ಬಿ. ಪಂಚಾಕ್ಷರಯ್ಯ, ಅಂಬರೀಶ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *