ತುಮಕೂರು: ರಾಷ್ಟ್ರದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿಯ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಸಹಾಯವಾಣಿ ಸಂಖ್ಯೆ: 0816-2213400ಯನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಇರುವ ರಾಗಿ, ಗೋಧಿ, ಅಕ್ಕಿ, ಮತ್ತಿತರ ಅಗತ್ಯ ವಸ್ತುಗಳ ಅಭಾವ ಸೃಷ್ಟಿಯಾಗದಂತೆ ಹಾಗೂ ಆಹಾರ ಧಾನ್ಯಗಳು ಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟವಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರಲ್ಲದೆ,ಜನರು ಆತಂಕ ಪಡುವ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಯಬಿಡುವವರು ಯಾರೇ ಆಗಲಿ ಅವರನ್ನು ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳ ಮೇಲೆ 24*7 ನಿಗಾವಹಿಸಲಿದೆ ಎಂದು ತಿಳಿಸಿದರು.

ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 9000 ಹಾಸಿಗೆಗಳು ಲಭ್ಯವಿದ್ದು, 12 ಆಕ್ಸಿಜûನ್ ಪ್ಲಾಂಟ್, ವೆಂಟಿಲೇಟರ್, ಆಂಬುಲೆನ್ಸ್ಗಳು ಸುಸ್ಥಿತಿಯಲ್ಲಿವೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕ ಸಭೆ/ಸಮಾರಂಭಗಳಿಗೆ ಅನುಮತಿ ಇಲ್ಲ :-
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಸಭೆ/ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ. ಮದುವೆ, ಮತ್ತಿತರ ಶುಭ ಸಮಾರಂಭಗಳಿಗೆ ಕಡಿಮೆ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಡುವವರನ್ನು ಕಾನೂನು ಕ್ರಮಕೈಗೊಳ್ಳಲಾಗುವುದು. ಯಾವುದೇ ತಪ್ಪು ಸಂದೇಶಗಳು ವಾಟ್ಸ್ಪ್ ಮೂಲಕ ಹಂಚಿಕೊಂಡರೆ ಸದರಿ ಗ್ರೂಪ್ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸುವ ಗಲಭೆಗಳಿಗೆ ಅವಕಾಶ ನೀಡಬಾರದು. ಯಾವುದೇ ಪ್ರತಿಭಟನೆಗಳಿಗೂ ಅನುಮತಿ ನೀಡಲಾಗುವುದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ಬಂದರೆ ಪ್ರತಿಯೊಬ್ಬರೂ ಅನುಸರಿಸಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಿದರು.
– ಕೆ.ಬಿ.ಚಂದ್ರಚೂಡ