ಕೊಟ್ಟಿಗೆಹಾರ: ಮೂಡಿಗೆರೆಯಿಂದ ಬಣಕಲ್‌ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73ರ ಪಕ್ಕದಲ್ಲಿ ರಾಜ್ ಸ್ಟೋನ್ ಕ್ರಷರ್ ಕಂಪನಿಯು ಎಂ ಸ್ಯಾಂಡ್, ಜೆಲ್ಲಿಕಲ್ಲು, ಸಿಮೆಂಟ್ ಹಾಗೂ ಇತರ ಕಟ್ಟಡ ಸಾಮಗ್ರಿಗಳನ್ನು ಸಂಗ್ರಹಿಸಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸದ್ಯ, ಸುಮಾರು ಅರ್ಧ ಎಕರೆ ಜಾಗದಲ್ಲಿ ಈ ವಸ್ತುಗಳ ದಾಸ್ತಾನು ಮಾಡಲಾಗಿದ್ದು, ರಸ್ತೆ ಪಕ್ಕದಲ್ಲಿಯೇ ಇರುವ ಕಾರಣದಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯರು ಹಾಗೂ ಪ್ರಯಾಣಿಕರಿಗೆ ಅಪಾಯದ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಉಂಟಾಗಿದೆ.

ಈ ಬಗ್ಗೆ ಕಂಪನಿಯವರಿಗೆ ಹಲವಾರು ಬಾರಿ ಮನವಿ ಮಾಡಿದರು ಯಾವುದೇ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಈ ವಸ್ತುಗಳನ್ನು ತೆರವುಗೊಳಿಸಬೇಕೆಂದು ಬಣಕಲ್ ಪಲ್ಗುಣಿ ಗ್ರಾಮದ ನಿವಾಸಿಗಳು ಒತ್ತಾಯಿಸಿದ್ದಾರೆ.

ಗ್ರಾಮಸ್ಥರ ಈ ಮನವಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನಕ್ಕೆ ತೆಗೆದುಕೊಂಡು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
-ರಾಹುಲ್